ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡ ಸಿ.ಎಂ. ನಿಂಬಣ್ಣವರ (76) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳು ಇದ್ದಾರೆ.
ಕೆಲ ದಿನಗಳ ಹಿಂದೆ ಹೃದಯ ಕಾಯಿಲೆಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯಲು ಬೆಂಗಳೂರಿನ ತಮ್ಮ ಪುತ್ರಿ ಮನೆಗೆ ತೆರಳಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಮೂಲಗಳು ತಿಳಿಸಿವೆ.
ಮೃತದೇಹವನ್ನು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿ ಪಟ್ಟಣಕ್ಕೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿಂಬಣ್ಣನವರ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲವು ಸಾಧಿಸಿದ್ದರು. ಅವರ ಅಗಲಿಕೆಯಿಂದಾಗಿ ಕಲಘಟಗಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು. ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಸಂತಾಪ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ವಿನಯ ಕುಲಕರ್ಣಿ, ಪ್ರಸಾದ ಅಬ್ಬಯ್ಯ, ಎನ್.ಎಚ್.ಕೊನರೆಡ್ಡಿ, ಪ್ರದೀಪ ಶೆಟ್ಟರ, ಮಾಜಿ ಸಿಎಂ ಜಗದೀಶ ಶೆಟ್ಟರ, ಸಚಿವ ಸಂತೋಷ ಲಾಡ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಶಾಸಕ ನಾಗರಾಜ ಛಬ್ಬಿ, ಪಾಲಿಕೆ ಸಭಾನಾಯಕ ಶಿವು ಹಿರೇಮಠ, ಸಂಜಯ ಕಪಟಕರ, ಬಸವರಾಜ ಕುಂದಗೋಳಮಠ, ರವಿ ನಾಯಕ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.