ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ
ಧಾರವಾಡ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಹಂಚಿಕೆ ಯಲ್ಲಿ ಅನ್ಯಾಯ ಹಾಗೂ ಕಾಂಗ್ರೆಸ್‌ನ ಕೆಲ ಸ್ಥಳೀಯ ಮತ್ತು ರಾಜ್ಯಮಟ್ಟದ ನಾಯಕರ ವರ್ತನೆಗಳಿಂದ ಬೇಸತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಕೆಪಿಸಿಸಿ ವಕ್ತಾರ ಹಾಗೂ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಮುಖಂಡ ಪಿ.ಎಚ್. ನೀರಲಕೇರಿ ತಿಳಿಸಿದ್ದಾರೆ.
ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸಬಯಸಿ ನಾಮಪತ್ರ ಸಲ್ಲಿಸಿದ್ದೆ. ಆದರೆ, ಕಾಂಗ್ರೆಸ್ ನಾಯಕರು ಪಕ್ಷಕ್ಕಾಗಿ ದಶಕಗಳ ಕಾಲ ದುಡಿದುಕೊಂಡು ಬಂದಿದ್ದ ನಿಷ್ಠಾವಂತ ಕಾರ್ಯಕರ್ತನಾದ ನನ್ನನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಸೌಜನ್ಯಕ್ಕೂ ಒಂದು ಮಾತು ನಮ್ಮನ್ನು ಸಂಪರ್ಕಿಸಿಲ್ಲ. ಇದನ್ನೆಲ್ಲ ನೋಡಿದರೆ ಕಾಂಗ್ರೆಸ್‌ನಲ್ಲೂ ಟಿಕೆಟ್‌ಗಳು ಮಾರಾಟವಾದವೇ ಎಂಬ ಅನುಮಾನ ಬಂದಿದೆ ಎಂದರು.
ಕಳೆದ ಒಂದು ವರ್ಷದಿಂದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಸ್ಥಳೀಯ ಶಾಸಕ ಅರವಿಂದ ಬೆಲ್ಲದ ಅವರ ನಿಷ್ಕ್ರಿಯತೆ ಬಗ್ಗೆ ನಾನು ರಚನಾತ್ಮಕ ಹೋರಾಟ ಮಾಡಿಕೊಂಡು ಬಂದಿದ್ದೆ. ಅಷ್ಟೇ ಅಲ್ಲದೇ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಗುರುತಿನ ಚೀಟಿ ಹಗರಣದ ಬಗ್ಗೆ ನಿರಂತರ ಹೋರಾಟ ಮಾಡಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದೆ. ಇದರಿಂದ ಚುನಾವಣಾ ಆಯೋಗ ಬಿಗಿ ಕ್ರಮಗಳನ್ನು ಕೈಗೊಂಡಿತ್ತು ಎಂದಿದ್ದಾರೆ.
ಈ ಬಾರಿ ರಾಜ್ಯದಲ್ಲಿ ವ್ಯಾಪಕವಾಗಿ ಬೀಸುತ್ತಿರುವ ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವುದರಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಸ್ವಾರ್ಥದಿಂದ ಹಿಂದೆ ಬಿದ್ದರೇ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಹಾಗೂ ಬೆಂಬಲಿಗರ ಸಭೆ ಕರೆದು ಮುಂದಿನ ನಡೆ ತೀರ್ಮಾನಿಸುವುದಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.