ಬೆಂಗಳೂರು: ನಾಡಿನಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರನ್ನು ಅಪರಾಧಿ ಎಂದು ಘೋಷಿಸಿದೆ. ಸತತ ಹತ್ತು ವರ್ಷಗಳ ಸುದೀರ್ಘ ಕಾನೂನು ಹೋರಾಟ ಮತ್ತು ವಿಚಾರಣೆಯ ನಂತರ ಇಂದು ಈ ಮಹತ್ವದ ತೀರ್ಪು ಹೊರಬಿದ್ದಿದೆ.

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ‘ಉದಯ್ ಜಿಮ್’ನಲ್ಲಿ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ಈ ಹತ್ಯೆಯ ಒಳಸಂಚು ರೂಪಿಸಿದ ಆರೋಪ ಎದುರಿಸುತ್ತಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ಕುಟುಂಬದ ಒತ್ತಾಯದ ಮೇರೆಗೆ ೨೦೧೯ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆ ಚುರುಕುಗೊಳಿಸಿ ವಿನಯ್ ಕುಲಕರ್ಣಿ ಅವರನ್ನು ೧೫ನೇ ಆರೋಪಿಯನ್ನಾಗಿ ಹೆಸರಿಸಿ ಬಂಧಿಸಿತ್ತು.

ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದ ಶಾಸಕರು ಸೇರಿದಂತೆ 21 ಆರೋಪಿಗಳ ಪೈಕಿ ವಿನಯ್ ಕುಲಕರ್ಣಿ ದೋಷಿ ಎಂದು ಸಾಬೀತಾಗಿದ್ದು, ವಾಸುದೇವ ಹಾಗೂ ಸೋಮಶೇಖರ್ ನ್ಯಾಮಗೌಡ ಎಂಬುವವರನ್ನು ನ್ಯಾಯಾಲಯವು ನಿರ್ದೋಷಿ ಎಂದು ಬಿಡುಗಡೆ ಮಾಡಿದೆ. ತೀರ್ಪು ಪ್ರಕಟವಾದ ಬೆನ್ನಲ್ಲೇ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಯಿತು. ಈ ವೇಳೆ ತಂದೆಯ ಸ್ಥಿತಿ ಕಂಡು ಅವರ ಮೂವರು ಮಕ್ಕಳು ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು.
ಕೋರ್ಟ್ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಈಗ ಗಂಡಾಂತರ ಎದುರಾಗಿದ್ದು, ನಾಳೆ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಕಳೆದ ಫೆಬ್ರವರಿ ೨೮ರಂದು ಜಾಮೀನಿನ ಮೇಲೆ ಹೊರಬಂದಿದ್ದ ಶಾಸಕರು, ೪೬ ದಿನಗಳ ನಂತರ ಮತ್ತೆ ಜೈಲು ಪಾಲಾಗಿದ್ದಾರೆ.


