ಕಳಸ ತಾಲೂಕಿನ ಕಟ್ಟೆಗುಣಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಕಾಮಗಾರಿ: ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ

ಕಳಸ (ಚಿಕ್ಕಮಗಳೂರು): ತಾಲೂಕಿನ ಹೊರನಾಡು ಗ್ರಾಮದ ಸರ್ವೆ ನಂಬರ್ 62ರಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಹತ್ತಾರು ಎಕರೆ ಅರಣ್ಯ ಮತ್ತು ಕಂದಾಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಾಮಗಾರಿ ನಡೆಸುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊರನಾಡುಶೃಂಗೇರಿ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಕಟ್ಟೆಗುಣಿ ಎಂಬ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಉದ್ದೇಶದಿಂದ ಹತ್ತಾರು ಬೃಹತ್ ಮರಗಳನ್ನು ಕಡಿದು ಜಾಗವನ್ನು ಸಮತಟ್ಟುಗೊಳಿಸಲಾಗಿದೆ. ಅಲ್ಲದೆ, ಸ್ಥಳಕ್ಕೆ ನಿರ್ಮಾಣ ಸಾಮಗ್ರಿಗಳನ್ನು ತಂದು ಕಟ್ಟಡ ಕಾಮಗಾರಿಯನ್ನೂ ಪ್ರಾರಂಭಿಸಲಾಗಿದೆ.

ಈ ಅಕ್ರಮದ ಕುರಿತು ಗ್ರಾಮಸ್ಥರು ಈಗಾಗಲೇ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ ಒತ್ತುವರಿದಾರರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಮಗಾರಿಯನ್ನು ರಾಜಾರೋಷವಾಗಿ ಮುಂದುವರೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಕಾನೂನು ಕ್ರಮ ಕೈಗೊಂಡು ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು; ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.



